February 4, 2026
Yatnal

ವಿಜಯಪುರ: ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ ಎನ್ನಲಾದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌.

ಯತ್ನಾಳ್ ಅವರು ಏಪ್ರಿಲ್ 7 ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಅವರ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯತ್ನಾಳ ಅವರು ‘ಬಾಳ ಸಾಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ’ ಎಂಬ ಆಧಾರರಹಿತ ಹೇಳಿಕೆ ನೀಡಿದ್ದು, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ದೂರುದಾರರು ತಿಳಿಸಿದ್ದಾರೆ.

ಯತ್ನಾಳ ಅವರ ಈ ಕೃತ್ಯವು ಭಾರತೀಯ ನ್ಯಾಯ ಸಂಹಿತೆ (BNS) ಯ ಸೆಕ್ಷನ್‌ಗಳಾದ 196 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಹೇಳಿಕೆ), 299 (ಉದ್ದೇಶಪೂರ್ವಕವಾಗಿ ಅವಮಾನಿಸುವುದು, ಶಾಂತಿ ಭಂಗಪಡಿಸುವ ಉದ್ದೇಶದಿಂದ) ಮತ್ತು 353 (ಕೋಮು ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.