March 22, 2026
68638867833d51751353447

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆ ಚಟುವಟಿಕೆಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶೀಲಿಸಿ ಕ್ರಮವಹಿಸಲು ಮುಂದಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್​ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಸಚಿವ ಪ್ರಿಯಾಂಕ್​ ಖರ್ಗೆ ಪತ್ರದಲ್ಲಿ ”ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ” ಎಂದು ತಿಳಿಸಿದ್ದಾರೆ.

”ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ತುಂಬಲಾಗುತ್ತಿದೆ” ಎಂದು ದೂರಿದ್ದಾರೆ.

”ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದ್ದಾರೆ.