ಮೇ 3 ರಂದು ನಡೆದಿದ್ದ ನೀಟ್ (NEET UG 2026) ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. “ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಓದಿದ ಲಕ್ಷಾಂತರ ವಿದ್ಯಾರ್ಥಿಗಳು ಇಂದು ಕಂಗಾಲಾಗಿದ್ದಾರೆ. ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿದ್ದಾಗ ಪರೀಕ್ಷೆ ರದ್ದು ಮಾಡಿರುವುದು ಅವರ ಮಾನಸಿಕ ನೆಮ್ಮದಿಯನ್ನು ಕಿತ್ತುಕೊಂಡಿದೆ.
ದೇಶದ ಅತ್ಯಂತ ದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಪದೇ ಪದೇ ಇಂತಹ ಅಕ್ರಮಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ಮತ್ತು ಎನ್‌ಟಿಎ (NTA) ಸಂಸ್ಥೆಯ ಸಂಪೂರ್ಣ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಶ್ರೀಮಂತರಿಗೆ ಪೇಪರ್ ಮಾರಿ ಬಡ ವಿದ್ಯಾರ್ಥಿಗಳ ಪ್ರತಿಭೆಗೆ ಅನ್ಯಾಯ ಮಾಡಲಾಗುತ್ತಿದೆ,” ಎಂದು ಆರೋಪಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು. ಬರೀ ಸಿಬಿಐ ತನಿಖೆ ಎಂದು ಕಾಲಹರಣ ಮಾಡದೆ, ವಿದ್ಯಾರ್ಥಿಗಳಿಗೆ ಆಗಿರುವ ನಷ್ಟಕ್ಕೆ ಯಾರು ಹೊಣೆ ಎಂಬುದನ್ನು ಸರ್ಕಾರ ಉತ್ತರಿಸಬೇಕು,” ಎಂದು ಅವರು ಆಗ್ರಹಿಸಿದರು.
ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿರುವುದನ್ನು ಕಾಂಗ್ರೆಸ್ ಸಹಿಸುವುದಿಲ್ಲ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮುಂದಿನ ಪರೀಕ್ಷೆಯನ್ನು ಯಾವುದೇ ಅಕ್ರಮಗಳಿಲ್ಲದೆ ಪಾರದರ್ಶಕವಾಗಿ ನಡೆಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಇಬ್ರಾಹಿಂ ನವಾಝ್ ಎಚ್ಚರಿಕೆ ನೀಡಿದ್ದಾರೆ.
