March 22, 2026
manmohan-singh-2-1735370611

ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್​ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಅಂತ್ಯಕ್ರಿಯೆಯಲ್ಲಿ ಭುತಾನ್​ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ಚುಕ್, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್​ ಓಂ ಬಿರ್ಲಾ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​​ರಿಂದ ಹಿಡಿದು ಪ್ರಮುಖ ಗಣ್ಯರು, ಕೈ ನಾಯಕರು, ವಿದೇಶಿ ರಾಜತಾಂತ್ರಿಕರು ಪಾಲ್ಗೊಂಡರು. ಮೂರು ಸೇನಾಪಡೆಯಿಂದ ಗೌರವ ಸಮರ್ಪಣೆ ಮಾಡಲಾಯಿತು.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ಆರ್ಥಿಕ ಹರಿಕಾರನಿಗೆ ಅಂತಿಮ ನಮನ:

ಇನ್ನು ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಅಲ್ಲಿಂದ ಎಐಸಿಸಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಬೆಳಗ್ಗೆ 9.30ರವರೆಗೆ ಅಲ್ಲಿಯೇ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ತದನಂತರ ಅಲ್ಲಿಂದ ಮಾಜಿ ಪ್ರಧಾನಿಯ ಅಂತಿಮ ಯಾತ್ರೆ ಆರಂಭವಾಯಿತು. ಯಾತ್ರೆಯಲ್ಲಿ ರಸ್ತೆ ಉದ್ದಕ್ಕೂ ಅಭಿಮಾನಿಗಳು ಪಾಲ್ಗೊಂಡಿದ್ದು, ಲಕ್ಷಾಂತರ ಜನರು ಭಾಗಿಯಾದರು.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಿಸೆಂಬರ್​ 26 ರ ರಾತ್ರಿ ನಿಧನರಾಗಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ದೇಶವನ್ನು ಅಪಾಯದಿಂದ ಪಾರು ಮಾಡಿದ ಮಹಾನ್ ಚೇತನದ ಅಗಲಿಕೆ ಹಿನ್ನೆಲೆ ಕೇಂದ್ರ ಸರ್ಕಾರ 7 ದಿನಗಳ ಶೋಕಾಚರಣೆ ಘೋಷಿಸಿದೆ.