ವಯನಾಡ್(ಜು.30): ಕೇರಳದ ವಯನಾಡ್ ನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 19ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿರುವ ಬಗ್ಗೆ ವರದಿ ತಿಳಿಸಿದೆ. ಸುಮಾರು 400 ಕುಟುಂಬಗಳು ಅತಂತ್ರವಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಸಂಭವಿಸಿದ ಗುಡ್ಡ ದುರಂತದಲ್ಲಿ ಇನ್ನೂ ಮೃತ ದೇಹಗಳೇ ಪತ್ತೆ ಆಗಿಲ್ಲ, ಈ ಘಟನೆ ಮಾಸೋ ಮುನ್ನವೇ ಮತ್ತೊಂದು ಭೀಕರ ದುರಂತ ನಡೆದಿದೆ.ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ನಸುಕಿನ ಜಾವ ಸುಮಾರು 4 ಗಂಟೆಯ ಸುಮಾರಿನಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ದೊಡ್ಡ ಬೆಟ್ಟವೊಂದು ಕುಸಿದು ಬಂದು ಇಡೀ ಗ್ರಾಮಕ್ಕೆ ಗ್ರಾಮವೇ ಭೂ ಸಮಾಧಿಯಾಗಿದೆ. 100 ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಪ್ರವಾಹ ಕೂಡ ನಿರ್ಮಾಣವಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) , ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಯುದ್ದೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.